ಜನಜಾಗೃತಿಯಿಂದ ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ -ಕಹಳೆ ನ್ಯೂಸ್

ಬೆಳ್ತಂಗಡಿ: ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನಾಚರಣೆ ಪ್ರಯುಕ್ತ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ರಾಜ್ಯದ 3,555 ಶಾಲಾ ಕಾಲೇಜುಗಳಲ್ಲಿ ಜಾಗೃತಿ ಅಭಿಯಾನ ಮುಖೇನ 3 ಲಕ್ಷ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲಿದೆ.
ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ 35 ವರ್ಷಗಳಿಂದ ದುಶ್ಚಟಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ವೇದಿಕೆ ಕಾರ್ಯ ನಿರ್ವಹಿಸುತ್ತಿದ್ದು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಸಮಾನಮನಸ್ಕರ ಜಿಲ್ಲಾ ವೇದಿಕೆಗಳನ್ನು ರಚಿಸಿ ಸುಮಾರು 2,100 ಕ್ಕಿಂತಲೂ ಹೆಚ್ಚು ಸ್ವಯಂಸೇವಕರು ಈ ಆಂದೋಲನದಲ್ಲಿ ಪಾಲ್ಗೊಳ್ಳುವರು ಎಂದು ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ.ಪಾçಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಸ್ವಾಸ್ಥ ಸಂಕಲ್ಪ ಕಾರ್ಯಕ್ರಮಗಳ ಮೂಲಕ ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಇದಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 35.55 ಲಕ್ಷ ರೂ. ಮೊತ್ತವನ್ನು ಮೀಸಲಿಡಲಾಗಿದೆ. ಸುಮಾರು 1145 ತರಬೇತುದಾರರನ್ನು ಆಯ್ಕೆ ಮಾಡಿದ್ದು, 4 ಕಿರುಚಿತ್ರಗಳ ಮೂಲಕವೂ ಜಾಗೃತಿ ಮೂಡಿಸಲಾಗುತ್ತಿದೆ.
ಶಿಕ್ಷಣ ಇಲಾಖೆ, ವಿಶ್ವವಿದ್ಯಾನಿಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳು ಅಭಿಯಾನಕ್ಕೆ ಕೈ ಜೋಡಿಸಿವೆ. ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಅನಿಲ್ ಕುಮಾರ್ ಎಸ್.ಎಸ್. ಮಾರ್ಗದರ್ಶನದಲ್ಲಿ, ವೇದಿಕೆ ರಾಜ್ಯ ಸಂಘಟನಾ ಅಧ್ಯಕ್ಷ ನಟರಾಜ್ ಬಾದಾಮಿ ನೇತೃತ್ವವಿದೆ. ಸ್ಥಳೀಯ ಯೋಜನಾ ಸಿಬಂದಿ ಕಾರ್ಯಕ್ರಮವನ್ನು ನಡೆಸುವರು ಎಂದು ವೇದಿಕೆ ತಿಳಿಸಿದೆ.














