
ಮಂಗಳೂರು : 72ನೇ ಅಖಿಲ ಭಾರತ ಸಹಕಾರ ಸಪ್ತಾಹ ಕರಾವಳಿ ಉತ್ಸವ ಮೈದಾನದಲ್ಲಿ ಇಂದು(ನ.16) ಅದ್ದೂರಿಯಾಗಿ ನಡೆಯಿತು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ , ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೃಷಿ ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕ್ ಗಳು, ಸೌಹಾರ್ದ ಸಹಕಾರ ಸಂಘಗಳು ಹಾಗೂ ಎಲ್ಲಾ ವಿಧದ ಸಹಕಾರ ಸಂಘಗಳು ಮತ್ತು ಸಹಕಾರ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಹಕಾರ ಸಂಸ್ಥೆಗಳ ಮೂಲಕ ಗ್ರಾಮೀಣ ಅಭಿವೃದ್ಧಿಯನ್ನು ಬಲಪಡಿಸುವುದು’ ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಸಹಕಾರ ಸಪ್ತಾಹವನ್ನು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಉದ್ಘಾಟಿಸಿದರು.
ಬಳಿಕ ಅವರು ಮಾತನಾಡಿ, ಸಹಕಾರ ಕ್ಷೇತ್ರವು ಶಕ್ತಿ ಇಲ್ಲದವರಿಗೆ ಶಕ್ತಿ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿ ಆಗಬೇಕು. ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರಿ ರಂಗವು ಈ ದಿಶೆಯಲ್ಲಿ ಶ್ಲಾಘನೀಯ ಕೆಲಸ ಮಾಡಿದೆ. ಕರಾವಳಿ ಭಾಗದ ಸಾಕಷ್ಟು ಮಂದಿ ಮಹಿಳೆಯರು ಸ್ವ- ಸಹಾಯ ಸಂಘಗಳ ಮೂಲಕ ಸ್ವಾವಲಂಬಿಗಳಾಗಿದ್ದಾರೆ. ಅವರಲ್ಲಿ ಆತ್ಮವಿಶ್ವಾಸ ತುಂಬಿದೆ. ಶಿಕ್ಷಣ ಮತ್ತು ಇತರ ಕೆಲವು ಕ್ಷೇತ್ರಗಳಿಗೆ ಸಾಲ ಸೌಲಭ್ಯ ನೀಡಲು ವಾಣಿಜ್ಯ ಬ್ಯಾಂಕುಗಳು ಹಿಂದೇಟು ಹಾಕಿದಾಗ ಸಹಕಾರಿ ಬ್ಯಾಂಕು ಮುಂದೆ ಬಂದು ಸಾಲ ಒದಗಿಸಿ ಸಹಕರಿಸಿದೆ ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಗಾರ್ಮೆಂಟ್ ಫ್ಯಾಕ್ಟರಿಯನ್ನು ಆರಂಭಿಸಿ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಮುಂದಾಗಲಿ ಎಂದು ಸಲಹೆ ಮಾಡಿದರು.














