
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಸಾಫ್ಟ್‌ವೇರ್ ಇಂಜಿನಿಯರ್.
ಬಂಧಿತ ಆರೋಪಿಗಳಲ್ಲಿ ನಿತಿನ್ (31) ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದು, ಮೂಲತಃ ದಾವಣಗೆರೆಯವನು.
ಮತ್ತೊಬ್ಬ ಆರೋಪಿ 45 ವರ್ಷದ ಚಂದ್ರಶೇಖರ್ ಆಟೋ ಚಾಲಕನಾಗಿದ್ದು ಬೆಂಗಳೂರಿನ ಚಿಕ್ಕಬಣಾವರ ನಿವಾಸಿ.
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದ ಇತರ ಆರೋಪಿಗಳನ್ನು ಪೊಲೀಸರು ಹುಡುಕುತ್ತಿದ್ದಾರೆ. ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ದ ದೂರು ನೀಡಿದ್ದರು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರು ನಗರ ಪೊಲೀಸರು ಈ ಪ್ರಕರಣದ ತನಿಖೆಯನ್ನು ಸೈಬರ್ ಕ್ರೈಂ ಪೊಲೀಸರಿಗೆ ವರ್ಗಾವಣೆ ಮಾಡಿದ್ದಾರೆ. ತನಿಖೆ ನಡೆಸಿದ ಪೊಲೀಸರು ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಡಿಸೆಂಬರ್ 24ರಂದು ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದರು. ಅತಿ ಕೆಟ್ಟ ಪದಗಳನ್ನು ಬಳಕೆ ಮಾಡಿಕೊಂಡು ಸುಮಾರು 150 ಕಮೆಂಟ್‌ಗಳನ್ನು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದರು.
ಸಾಮಾಜಿಕ ಜಾಲತಾಣದ ಕಮೆಂಟ್‌ಗಳಲ್ಲಿ ಕೌಟುಂಬಿಕ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮೂಲಕ ಕಮೆಂಟ್‌ಗಳು ಬಂದಿವೆ ಎಂದು ಹೇಳಿದ್ದರು. ಒಂದು ವಾರಗಳ ಕಾಲ ಪರಿಶೀಲನೆ ನಡೆಸಿದ ಪೊಲೀಸರು ಈಗ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ 2ನೇ ಆರೋಪಿಯಾಗಿದ್ದು ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಆದರೆ ಡೆವಿಲ್ ಮತ್ತು ಮಾರ್ಕ್ ಚಿತ್ರ ಬಿಡುಗಡೆಯ ಸಮಯದಿಂದ ಸ್ಯಾಂಡಲ್‌ವುಡ್‌ನಲ್ಲಿ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ನಡೆಯುತ್ತಿದೆ.
ಈ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ. ಈ ಕುರಿತು ಸಿಸಿಬಿಗೆ ದೂರು ನೀಡಿದ್ದ ದರ್ಶನ್ ಪತ್ನಿ ವಿಜಯಲಕ್ಷ್ಮೀ ಪೊಲೀಸರ ತನಿಖೆ ವಿರುದ್ಧ ಅಸಮಾಧಾನ ಹೊರಹಾಕಿದ್ದರು.
ಆದರೆ ಪೊಲೀಸರು ಈಗ ತನಿಖೆ ಚುರುಕುಗೊಳಿಸಿದ್ದು, ಇಬ್ಬರನ್ನು ಬಂಧಿಸಲಾಗಿದೆ. 3ನೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇನ್ನೂ ಹಲವು ಜನರು ಕಮೆಂಟ್ ಮಾಡಿರುವ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ. ಕೆಲವು ಅಕೌಂಟ್‌ಗಳನ್ನು ಡಿಲೀಟ್, ಇನ್ ಆಕ್ಟೀವ್ ಮಾಡಿದ್ದು, ಅವರ ವಿವರಗಳನ್ನು ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ.














