
ರಾಂಚಿ: ಜಾರ್ಖಂಡ್ ಹೈಕೋರ್ಟ್‌ನ 18ನೇ ಮುಖ್ಯ ನ್ಯಾಯಮೂರ್ತಿಯಾಗಿ ಮಹೇಶ್ ಶರಶ್ಚಂದ್ರ ಸೋನಕ್ ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು.
ಇಲ್ಲಿನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಜಾರ್ಖಂಡ್ ರಾಜ್ಯಪಾಲರಾದ ಸಂತೋಷ್ ಕುಮಾರ್ ಗಂಗ್ವಾರ್ ಅವರು ನೂತನ ಮುಖ್ಯ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಈ ಪದಗ್ರಹಣ ಸಮಾರಂಭದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಮುಖ್ಯ ಕಾರ್ಯದರ್ಶಿ ಅವಿನಾಶ್ ಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ಉನ್ನತ ಅಧಿಕಾರಿಗಳು ಮತ್ತು ನ್ಯಾಯಾಂಗದ ಗಣ್ಯರು ಉಪಸ್ಥಿತರಿದ್ದರು. ಗುರುವಾರ ಬಿರ್ಸಾ ಮುಂಡಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಸೋನಕ್ ಅವರಿಗೆ ಹಿರಿಯ ಅಧಿಕಾರಿಗಳು ಆತ್ಮೀಯ ಸ್ವಾಗತ ಕೋರಿದ್ದರು.
ಬಾಂಬೆ ಹೈಕೋರ್ಟ್‌ನಿಂದ ಜಾರ್ಖಂಡ್‌ಗೆ
ನ್ಯಾ. ಸೋನಕ್ ಅವರು ಈ ಹಿಂದೆ ಬಾಂಬೆ ಹೈಕೋರ್ಟ್‌ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ತಿಂಗಳು ಸುಪ್ರೀಂ ಕೋರ್ಟ್ ಕೊಲಿಜಿಯಂ ಇವರ ಹೆಸರನ್ನು ಜಾರ್ಖಂಡ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸು ಮಾಡಿತ್ತು.
ನಿಕಟಪೂರ್ವ ಮುಖ್ಯ ನ್ಯಾಯಮೂರ್ತಿ ತರ್ಲೋಕ್ ಸಿಂಗ್ ಚೌಹಾಣ್ ಅವರು ಜ.8 ರಂದು 62 ವರ್ಷ ಪೂರೈಸಿ ನಿವೃತ್ತರಾದ ಹಿನ್ನೆಲೆಯಲ್ಲಿ, ಸೋನಕ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.














