ಉಡುಪಿ: ಪೊಲೀಸ್ ಇಲಾಖೆಯ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು – ಕಹಳೆ ನ್ಯೂಸ್

ಉಡುಪಿ: ಜನಸ್ನೇಹಿ ಪೊಲೀಸ್ ಉಪನಿರೀಕ್ಷಕರಾಗಿ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಪ್ರಸ್ತುತ ಕುಂದಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ನಾಸೀರ್ ಹುಸೇನ್ (58) ಮೃತಪಟ್ಟಿದ್ದಾರೆ. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟ್ನೆಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಭಾನುವಾರ ಬೆಳಗ್ಗೆ ಹಮ್ಮಿಕೊಳ್ಳಲಾಗಿತ್ತು. ಇದರಲ್ಲಿ ನಾಸೀರ್ ಹುಸೇನ್ ಸೇರಿದಂತೆ ನೂರಾರು ಪೊಲೀಸರು ಪಾಲ್ಗೊಂಡಿದ್ದರು.
ಮ್ಯಾರಥಾನ್ ಓಡುತ್ತಿದ್ದ ನಾಸೀರ್ ಹುಸೇನ್ ಒಮ್ಮೆಲೆ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡರು ಎನ್ನಲಾಗಿದೆ. ಕೂಡಲೇ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷಿಸಿದ ವೈದ್ಯರು ಅವರು ಮೃತ ಪಟ್ಟಿರುವುದಾಗಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಭಾರತೀಯ ಸೇನೆಯಲ್ಲಿ ಕರ್ತವ್ಯನಿರ್ವಹಿಸಿ ನಿವೃತ್ತಿ ಪಡೆದು ಪೊಲೀಸ್ ಇಲಾಖೆ ಪಿಎಸ್ಐ ಪರೀಕ್ಷೆ ಬರೆದ ನಾಸೀರ್ 2010 ಬ್ಯಾಚ್‌ನ ಪೊಲೀಸ್ ಸಬ್ಇನ್ಸ್‌ಪೆಕ್ಟರ್ ಆಗಿ ಇಲಾಖೆಗೆ ನಿಯೋಜನೆಗೊಂಡಿದ್ದರು. ಉಡುಪಿ ಜಿಲ್ಲೆಯ ಅಮಾಸೆಬೈಲು, ಕುಂದಾಪುರ ನಗರ, ಕುಂದಾಪುರ ಸಂಚಾರ ಠಾಣೆ, ಶಂಕರನಾರಾಯಣ, ಕೊಲ್ಲೂರು, ಕಾರ್ಕಳ ಗ್ರಾಮಾಂತರ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಸೆನ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು. ಕೆಲ ತಿಂಗಳ ಹಿಂದೆ ಕುಂದಾಪುರ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದರು.









