
ಪಿಕಪ್‌ನಲ್ಲಿದ್ದ ಕಾರ್ಮಿಕರು ದಿನ ಕೆಲಸದ ನಂತರ ಲೆಬಾದ್ ಪಟ್ಟಣದಿಂದ ತಿರ್ಲಾ ಬಳಿಯ ಸೆಮ್ಲಿಪುರ ಗ್ರಾಮಕ್ಕೆ ಹಿಂತಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಿಕಪ್ ನಿಯಂತ್ರಣ ತಪ್ಪಿ, ಪಲ್ಟಿಯಾಗಿ ಡಿವೈಡರ್ ದಾಟಿ ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಎಸ್‌ಯುವಿಗೆ ಡಿಕ್ಕಿ ಹೊಡೆದಿದೆ. ಎಸ್‌ಯುವಿ ಕಾರಿನಲ್ಲಿದ್ದವರಿಗೆ ಯಾವುದೇ ಹಾನಿಯಾಗಿಲ್ಲ. ಆದರೆ ಪಿಕಪ್‌ನಲ್ಲಿದ್ದ ಅನೇಕರು ವಾಹನದ ಅಡಿಯಲ್ಲಿ ಸಿಲುಕಿಕೊಂಡು ಮೃತಪಟ್ಟಿದ್ದಾರೆ ಎಂದು ಇಂದೋರ್ (ಗ್ರಾಮೀಣ) ಡಿಐಜಿ ಮನೋಜ್ ಕುಮಾರ್ ಸಿಂಗ್ ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಮೃತರ ಕುಟುಂಬಸ್ಥರು ಹಾಗೂ ಗಾಯಾಳುಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ. ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದ ಅಪಘಾತದಲ್ಲಿ ಜೀವಹಾನಿಯಾದ ಸುದ್ದಿ ಕೇಳಿ ತೀವ್ರ ನೋವುಂಟಾಗಿದೆ. ಈ ಅಪಘಾತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಸಂಬಂಧಿಕರಿಗೆ ಪಿಎಂ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮೋದಿ ಎಕ್ಸ್‌ನಲ್ಲಿ ತಿಳಿಸಿದ್ದಾರೆ.
ಇನ್ನು ಘಟನೆಯ ಕುರಿತು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವು ನೀಡುವುದಾಗಿ ಘೋಷಿಸಿದ್ದಾರೆ.









