
ಕೊಯಮತ್ತೂರು: ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವತಿಯೊಬ್ಬಳ ಮನೆಗೆ ಯುವಕನೊಬ್ಬ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯಗಳು ಅಲ್ಲಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ತೊಂಡಾಮುತ್ತೂರು ಎಂಬ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಆರೋಪಿ ಯುವಕ ಅದೇ ಭಾಗದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಆದರೆ ಯುವತಿ ಆತನ ಪ್ರೀತಿಯನ್ನು ನಿರಾಕರಿಸಿದ್ದಾಳೆ. ಇದರಿಂದ ತೀವ್ರ ಕೋಪಗೊಂಡ ಯುವಕ, ಆಕೆಗೆ ಪಾಠ ಕಲಿಸಲು ನಿರ್ಧರಿಸಿ ಈ ಕೃತ್ಯ ಎಸಗಿದ್ದಾನೆ.
ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಗಳಲ್ಲಿ, ಯುವಕ ಕೈಯಲ್ಲಿ ಪೆಟ್ರೋಲ್ ಬಾಂಬ್ ಹಿಡಿದು ಯುವತಿಯ ಮನೆಯ ಮುಂದೆ ಬರುತ್ತಾನೆ. ಯಾರಿಗೂ ಅನುಮಾನ ಬಾರದಂತೆ ಕ್ಷಣಾರ್ಧದಲ್ಲಿ ಬಾಂಬ್‌ಗೆ ಬೆಂಕಿ ಹಚ್ಚಿ, ಅದನ್ನು ನೇರವಾಗಿ ಮನೆಯೊಳಗೆ ಎಸೆದು ಅಲ್ಲಿಂದ ಕಾಲ್ಕಿತ್ತಿದ್ದಾನೆ. ಬಾಂಬ್ ಬಿದ್ದ ತಕ್ಷಣ ಮನೆಯ ಮುಂಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದಿರುವುದನ್ನು ದೃಶ್ಯಗಳಲ್ಲಿ ಕಾಣಬಹುದು.
ಘಟನೆ ನಡೆದ ಸಂದರ್ಭದಲ್ಲಿ ಮನೆಯಲ್ಲಿದ್ದವರು ತಕ್ಷಣ ಎಚ್ಚೆತ್ತುಕೊಂಡಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಸ್ಥರು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರುವ ಆರೋಪಿ ಯುವಕನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆತಂಕವನ್ನು ಮೂಡಿಸಿದ್ದು, ಮಹಿಳೆಯರ ಸುರಕ್ಷತೆಯ ಬಗ್ಗೆ ಮತ್ತೊಮ್ಮೆ ಪ್ರಶ್ನೆಗಳು ಏಳುವಂತೆ ಮಾಡಿದೆ.











