
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ನಡೆದಿದ್ದ 11 ವರ್ಷದ ಅಪ್ರಾಪ್ತ ಬಾಲಕಿಯ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಎನ್‌ಕೌಂಟರ್ ಮಾಡಿ ಹತ್ಯೆ ಮಾಡಿದ್ದಾರೆ.
ರಾಜ್ಯಾದ್ಯಂತ ಭಾರಿ ಆಕ್ರೋಶ ಮೂಡಿಸಿದ್ದ ಈ ಘಟನೆಯ ಪ್ರಮುಖ ಆರೋಪಿಯ ಪ್ರವಾಶ್ ಮೊಂಡಲ್‌ನನ್ನು ತನಿಖೆಯ ಭಾಗವಾಗಿ ಸ್ಥಳ ಮಹಜರಿಗೆ ಕರೆದೊಯ್ದಾಗ, ಆತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ನಡೆಸಿದ ಗುಂಡಿನ ದಾಳಿಗೆ ಆರೋಪಿ ಬಲಿಯಾಗಿದ್ದಾನೆ.
ಕಳೆದ ಕೆಲವು ದಿನಗಳ ಹಿಂದೆ ಬಾರುಯಿಪುರದಲ್ಲಿ 11 ವರ್ಷದ ಶಾಲಾ ಬಾಲಕಿಯೊಬ್ಬಳ ಮೇಲೆ ಅತ್ಯಂತ ಕ್ರೂರವಾಗಿ ಅತ್ಯಾಚಾರ ನಡೆಸಿ, ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿತ್ತು. ಬಾಲಕಿಯ ಮೃತದೇಹ ಪತ್ತೆಯಾದ ಬಳಿಕ ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿ ಸಂಘಟನೆಗಳು ಬೀದಿಗಿಳಿದು ಭಾರಿ ಪ್ರತಿಭಟನೆ ನಡೆಸಿದ್ದವು. ಮಹಿಳೆಯರ ಸುರಕ್ಷತೆಯ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.









