ನೋಯ್ಡಾದ ವಸತಿ ಕಟ್ಟಡದಲ್ಲಿ ಹೊತ್ತಿ ಉರಿದ ಬೆಂಕಿ : ಉಸಿರುಗಟ್ಟಿ ಇಬ್ಬರು ದುರ್ಮರಣ – ಕಹಳೆ ನ್ಯೂಸ್

ಲಕ್ನೋ: ನಾಲ್ಕು ಮಹಡಿಗಳ ವಸತಿ ಕಟ್ಟಡದ ನೆಲಮಹಡಿಯ ಪಾರ್ಕಿಂಗ್ ಪ್ರದೇಶದಲ್ಲಿ ಹೊತ್ತಿಕೊಂಡ ಬೆಂಕಿ ಕ್ಷಣಾರ್ಧದಲ್ಲೇ ಇಡೀ ಕಟ್ಟಡವನ್ನು ಆವರಿಸಿದ್ದು, ದಟ್ಟ ಹೊಗೆಯಿಂದ ಉಸಿರುಗಟ್ಟಿ ಇಬ್ಬರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದ ಮಾಮುರಾ ಗ್ರಾಮದಲ್ಲಿ ಸಂಭವಿಸಿದೆ.
ಗೌತಮ್ ಬುದ್ಧ ನಗರ ಜಂಟಿ ಪೊಲೀಸ್ ಆಯುಕ್ತ ರಾಜೀವ್ ನರೈನ್ ಮಾತನಾಡಿ, ಬೆಂಕಿ ಕಾಣಿಸಿಕೊಂಡ ಕಟ್ಟಡವು ಜಿ+4 ಮಾದರಿಯ ವಸತಿ ಕಟ್ಟಡವಾಗಿದ್ದು, ನೆಲಮಹಡಿಯಲ್ಲಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇತ್ತು ಎಂದು ತಿಳಿಸಿದ್ದಾರೆ. ಅಲ್ಲಿಂದಲೇ ದಟ್ಟ ಹೊಗೆ ಮೇಲಿನ ಮಹಡಿಗಳಿಗೆ ಹರಡಿದ ಪರಿಣಾಮ ಇಬ್ಬರ ಆರೋಗ್ಯ ಗಂಭೀರವಾಗಿ ಹದಗೆಟ್ಟಿತ್ತು. ಹೊಗೆ ಉಸಿರಾಡಿದ ಪರಿಣಾಮ ಅಸ್ವಸ್ಥಗೊಂಡಿದ್ದ ಇಬ್ಬರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರ ಗುರುತು ಹಾಗೂ ಇತರ ವಿವರಗಳನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.
ಇವಿ ಚಾರ್ಜಿಂಗ್ನಿಂದ ಬೆಂಕಿ?
ಪ್ರಾಥಮಿಕ ತನಿಖೆಯಲ್ಲಿ ಇವಿ ಚಾರ್ಜಿಂಗ್ ವೇಳೆ ಉಂಟಾದ ಸ್ಪಾರ್ಕ್ನಿಳದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಬೆಂಕಿ ಸಮೀಪದಲ್ಲಿದ್ದ ಪೆಟ್ರೋಲ್ ವಾಹನಗಳಿಗೆ ವ್ಯಾಪಿಸಿ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದೆ ಎನ್ನಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಫೇಸ್-3 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಟ್ಟಡದ ಮಾಲೀಕ ಹಾಗೂ ಲೀಸ್ದಾರರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಅಗ್ನಿ ಸುರಕ್ಷತಾ ನಿಯಮಗಳ ಉಲ್ಲಂಘನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ.
ಯೋಗಿ ಆದಿತ್ಯನಾಥ್ ವಿಷಾದ:
ಇದೇ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿದ್ದು, ತಕ್ಷಣ ಸ್ಥಳಕ್ಕೆ ತೆರಳಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳನ್ನು ಮೇಲ್ವಿಚಾರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಾಳುಗಳಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಹಾಗೂ ಸಂತ್ರಸ್ತರಿಗೆ ತಕ್ಷಣ ನೆರವು ಒದಗಿಸುವಂತೆ ನಿರ್ದೇಶನ ನೀಡಿದ್ದಾರೆ.
ಸದ್ಯ ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಅಗ್ನಿಶಾಮಕ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಸುಮಾರು 50 ಕುಟುಂಬಗಳನ್ನು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಚಾಲಿತ ವಾಹನ (ಇವಿ) ಚಾರ್ಜ್ ಮಾಡುತ್ತಿದ್ದ ವೇಳೆ ಕಿಡಿ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪಾರ್ಕಿಂಗ್ ಪ್ರದೇಶದಲ್ಲಿ ಆರಂಭವಾದ ಬೆಂಕಿ ಅಲ್ಲೇ ನಿಲ್ಲದೆ ಸಮೀಪದಲ್ಲಿದ್ದ ಪೆಟ್ರೋಲ್ ವಾಹನಗಳಿಗೂ ವ್ಯಾಪಿಸಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಪಾರ್ಕಿಂಗ್ ಪ್ರದೇಶ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದೆ.
ಬೆಂಕಿಯ ಜೊತೆಗೆ ವ್ಯಾಪಕ ಪ್ರಮಾಣದಲ್ಲಿ ದಟ್ಟ ಹೊಗೆ ಮೇಲಿನ ಮಹಡಿಗಳಿಗೆ ಹರಡಿದ್ದರಿಂದ ನಿವಾಸಿಗಳು ತಮ್ಮ ಮನೆಗಳಲ್ಲೇ ಸಿಲುಕಿಕೊಂಡಿದ್ದರು. ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಏಳು ಅಗ್ನಿಶಾಮಕ ವಾಹನಗಳು, ಹೈಡ್ರಾಲಿಕ್ ಪ್ಲಾಟ್ಫಾರ್ಮ್ ಹಾಗೂ ವಿಶೇಷ ರಕ್ಷಣಾ ವಾಹನಗಳ ಸಹಾಯದಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದು, ಕಟ್ಟಡದಲ್ಲಿದ್ದ ಸುಮಾರು 50 ಕುಟುಂಬಗಳನ್ನು ಸುರಕ್ಷಿತವಾಗಿ ಹೊರಗೆ ಕರೆತಂದರು. ಕಾರ್ಯಾಚರಣೆಯ ವೇಳೆ ಯಾವುದೇ ಪ್ರಾಣಹಾನಿ ಸಂಭವಿಸದಂತೆ ತಡೆಯಲು ಅಧಿಕಾರಿಗಳು ನಿರಂತರವಾಗಿ ಶ್ರಮಿಸಿದರು.










