
ಬಂಟ್ವಾಳ: ಶಾಲೆ ಮುಗಿಸಿ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ಶಾಲಾ ಬಸ್‌ವೊಂದರ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ನಡೆದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಘಟನೆಯಲ್ಲಿ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಬಸ್ ಕಲ್ಲಡ್ಕ ಶ್ರೀರಾಮ ಶಾಲೆಗೆ ಸಂಬಂಧಪಟ್ಟಿದ್ದು, ಘಟನೆ ನಡೆದ ಕೂಡಲೇ ಸ್ಥಳೀಯರು ಹಾಗೂ ಸಾರ್ವಜನಿಕರು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿ ಬಸ್‌ನೊಳಗಿದ್ದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದರು. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಮಾಹಿತಿ ತಿಳಿದ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತದ ಕುರಿತು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗಾಯಾಳುಗಳ ನಿಖರ ಸಂಖ್ಯೆ ಹಾಗೂ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೇ ಹೊರಬೀಳಬೇಕಿದೆ.
ಪ್ರಾಥಮಿಕವಾಗಿ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಮರ ಉರುಳಿ ಬಿದ್ದಿರುವ ಸಾಧ್ಯತೆ ವ್ಯಕ್ತವಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.











