ಸುಳ್ಯದಲ್ಲಿ ಬ್ಯಾಟರಿ ಕಳವು ಪ್ರಕರಣ ಭೇದಿಸಿದ ಪೊಲೀಸರು: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯಿಂದ 5 ಬ್ಯಾಟರಿ ವಶ- ಕಹಳೆ ನ್ಯೂಸ್

ಮಂಗಳೂರು : ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬ್ಯಾಟರಿ ಕಳವು ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಮೇ 14, 2026ರ ರಾತ್ರಿ ಸುಳ್ಯ ವ್ಯಾಪ್ತಿಯಲ್ಲಿ ನಿಲ್ಲಿಸಲಾಗಿದ್ದ ಮೂರು ವಾಹನಗಳಿಂದ ಐದು ಬ್ಯಾಟರಿಗಳನ್ನು ಕಳವು ಮಾಡಲಾಗಿತ್ತು. ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿತ್ತು. ಪ್ರಕರಣದ ಆರೋಪಿಯಾಗಿರುವ ಕೇರಳದ ಕಾಸರಗೋಡು ನಿವಾಸಿ 33 ವರ್ಷದ ಅಬ್ದುಲ್ ಮಜಿದ್ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯ ಐದು ವಿವಿಧ ಕಳವು ಪ್ರಕರಣಗಳಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಜುಲೈ 20ರಂದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಿದ ವೇಳೆ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಕಳವು ಮಾಡಲಾಗಿದ್ದ ಐದು ಬ್ಯಾಟರಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.











