
ಕೋಟ : ಪುಣ್ಯ ಕ್ಷೇತ್ರ ಸಂರಕ್ಷಣಾ ಸಮಿತಿ ಸಂಚಾಲಕ ವಸಂತ್ ಗಿಳಿಯಾರ್ ಅವರ ಭಾವಚಿತ್ರವನ್ನು ಅನುಮತಿಯಿಲ್ಲದೆ ಬಳಸಿಕೊಂಡು ವಿರೂಪಗೊಳಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿ ಮಾನಹಾನಿ ಮಾಡಿರುವ ಆರೋಪದಡಿ ಉಜಿರೆ ನಿವಾಸಿ ತನುಷ್ ಶೆಟ್ಟಿ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಫೋಟೋವನ್ನು ಅನುಮತಿಯಿಲ್ಲದೆ ಬಳಸಿಕೊಂಡು ವಿರೂಪಗೊಳಿಸಿ ಪ್ರಕಟಿಸುವ ಮೂಲಕ ವೈಯಕ್ತಿಕ ಗೌರವ, ಸಾಮಾಜಿಕ ಪ್ರತಿಷ್ಠೆ ಹಾಗೂ ವ್ಯಕ್ತಿತ್ವಕ್ಕೆ ಧಕ್ಕೆ ಉಂಟುಮಾಡಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಸೇರಿದಂತೆ ಅನ್ವಯಿಸುವ ಕಾನೂನುಗಳಡಿ ಪ್ರಕರಣ ದಾಖಲಿಸಿ, ಸಂಬಂಧಿತ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಅಲ್ಲದೆ, ಮಾನಹಾನಿಕರ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಿಂದ ತೆರವುಗೊಳಿಸುವಂತೆ ಹಾಗೂ ಭವಿಷ್ಯದಲ್ಲಿ ಇಂತಹ ಕೃತ್ಯಗಳು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.
ಈ ಸಂಬಂಧ ಕೋಟ ಪೊಲೀಸ್ ಠಾಣೆಯಲ್ಲಿ ಪಿಟಿಷನ್ ಸಂಖ್ಯೆ 57/2026ರಡಿ ದೂರು ಸ್ವೀಕರಿಸಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.











