ಹಿಂದೂ ದೇವಾಲಯ ಆವರಣಕ್ಕೆ ಅಕ್ರಮವಾಗಿ ನುಗ್ಗಿ ಮುಸ್ಲಿಂ ಸಂಪ್ರದಾಯದ ʻಸಮಾಧಿ ಪೂಜೆʼ ಆಚರಣೆ : ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ -ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗದ್ದಿ ಬೆಟ್ಟದ ಶ್ರೀ ಸಿದ್ದೇಶ್ವರ ದೇವಾಲಯದ ಆವರಣದಲ್ಲಿ ನಡೆದಿರುವ ಘಟನೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿದೆ. ದೇವಾಲಯದ ಆವರಣಕ್ಕೆ ಪ್ರವೇಶಿಸಿ ಕೆಲವರು ಮುಸ್ಲಿಂ ಸಂಪ್ರದಾಯದಂತೆ `ಚಾದರ್ ಚಢಾನಾ’ ಆಚರಣೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧದ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಘಟನೆಯನ್ನ ಖಂಡಿಸಿ ಸ್ಥಳೀಯರು ಹಾಗೂ ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿವೆ.
ವಿರಾಜಪೇಟೆ ತಾಲೂಕಿನ ಮಾಲ್ದಾರೆ–ಮತ್ತೂರು ಸಮೀಪದ ಅರಣ್ಯ ಪ್ರದೇಶದಲ್ಲಿರುವ ಇತಿಹಾಸ ಪ್ರಸಿದ್ಧ ಗದ್ದಿ ಬೆಟ್ಟದ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಕಾರಿನಲ್ಲಿ ಬಂದ ಕೆಲವರು ದೇವಾಲಯದ ಆವರಣಕ್ಕೆ ಪ್ರವೇಶಿಸಿ, ಮುಸ್ಲಿಂ ಸಂಪ್ರದಾಯದಂತೆ ʻಚಾದರ್ ಚಢಾನಾʼ ಮಾದರಿಯ ಆಚರಣೆ ನಡೆಸಿರುವ ಆರೋಪ ಕೇಳಿಬಂದಿದೆ. ಸ್ಥಳದಲ್ಲಿ ಹೂವು ಹಾಗೂ ಚಾದರ ಅರ್ಪಿಸಿ ಪ್ರಾರ್ಥನೆ ಸಲ್ಲಿಸಿರುವ ದೃಶ್ಯಗಳು ವೈರಲ್ ಆಗಿವೆ.
ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಸ್ಥಳಕ್ಕೆ ಆಗಮಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಾಲಯದ ಪಾವಿತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ಆರೋಪಿಸಿರುವ ಅವರು, ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳನ್ನೂ ಸ್ಥಳೀಯರು ಪ್ರಶ್ನಿಸಿದ್ದಾರೆ. ಸಾಮಾನ್ಯ ಭಕ್ತರು ದೇವಾಲಯಕ್ಕೆ ತೆರಳುವಾಗ ಹಲವು ನಿಯಮಗಳನ್ನ ವಿಧಿಸುವ ಅಧಿಕಾರಿಗಳು, ಈ ಪ್ರಕರಣದಲ್ಲಿ ಹೇಗೆ ಪ್ರವೇಶಕ್ಕೆ ಅವಕಾಶ ನೀಡಿದ್ರಿ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಣ್ಯ ಇಲಾಖೆಯ ಮಾಹಿತಿ ಫಲಕಗಳ ಮೇಲೂ ಆಕ್ಷೇಪಾರ್ಹ ಬರಹ ಬರೆಯಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಈ ಎಲ್ಲ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಹಿಂದೂಪರ ಸಂಘಟನೆ ಆಕ್ರೋಶ
ಘಟನೆಯನ್ನು ಖಂಡಿಸಿ ಇಂದು ಹಿಂದೂ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿದ್ದು, ಕೃತ್ಯ ಎಸಗಿದವರನ್ನು ಪತ್ತೆಹಚ್ಚಿ ಬಂಧಿಸುವಂತೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಗೆ ಒತ್ತಾಯಿಸಿವೆ. ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆ ಇದೀಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಪ್ರಕರಣದ ಕುರಿತು ಪೊಲೀಸ್ ಹಾಗೂ ಸಂಬಂಧಪಟ್ಟ ಇಲಾಖೆಗಳ ತನಿಖೆ ಮುಂದುವರಿದಿದೆ.











