ಗ್ರಾಮ ಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿರಿ; ಪಂಚಾಯತ್ ಚುನಾವಣೆಗೆ ಈಗಿನಿಂದಲೇ ಸಜ್ಜಾಗಿ: ಶಾಸಕ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ: ಮುಂಬರುವ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷದ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಕರೆ ನೀಡಿದರು.
ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಗುರುವಾರ ನಡೆದ ಬಿಜೆಪಿ ಬಂಟ್ವಾಳ ಮಂಡಲದ ವಿಸ್ತೃತ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಬಂಟ್ವಾಳ ಕ್ಷೇತ್ರದಲ್ಲಿ ವಿಶೇಷ ಮತದಾರರ ತೀವ್ರ ಪರಿಷ್ಕರಣೆ (SIR) ಕಾರ್ಯ ಶೇ.100ರಷ್ಟು ಪೂರ್ಣಗೊಂಡಿದ್ದು, ಈ ಕಾರ್ಯದಲ್ಲಿ ಪಕ್ಷದ ಕಾರ್ಯಕರ್ತರು ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದು ಅಭಿನಂದಿಸಿದರು. ಪ್ರತಿಯೊಬ್ಬ ಅರ್ಹ ಮತದಾರನಿಗೂ ಮತದಾನದ ಹಕ್ಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಪ್ರಕ್ರಿಯೆ ನಡೆಯುತ್ತಿದ್ದು, ಆಗಸ್ಟ್ 17ರಂದು ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕವೂ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು. ಯಾವುದೇ ಲೋಪ ಅಥವಾ ತಪ್ಪು ಕಂಡುಬಂದಲ್ಲಿ ಅವುಗಳನ್ನು ಸರಿಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ತಿಳಿಸಿದರು.
ಗ್ರಾಮ ಪಂಚಾಯತ್ ಚುನಾವಣೆ ಪಕ್ಷದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ. ಜನರ ಸುಖ-ದುಃಖಗಳಲ್ಲಿ ಭಾಗಿಯಾಗಿ, ಅವರ ಸಮಸ್ಯೆಗಳಿಗೆ ಸ್ಪಂದಿಸಿ, ಗ್ರಾಮ ಮಟ್ಟದಲ್ಲಿ ಜನರೊಂದಿಗೆ ನಿಕಟ ಸಂಪರ್ಕ ಬೆಳೆಸಿದಾಗ ಮಾತ್ರ ಸಂಘಟನೆ ಮತ್ತಷ್ಟು ಬಲಿಷ್ಠವಾಗಲು ಸಾಧ್ಯ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಈಗಿನಿಂದಲೇ ಸಂಘಟಿತವಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕರು ಕರೆ ನೀಡಿದರು.
ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ಆಗುತ್ತಿರುವ ಲೋಪಗಳು ಹಾಗೂ ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತು ಅಂಗವಿಕಲರ ವೇತನ ವಿತರಣೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಜನಪರವಾಗಿ ಎತ್ತಿಹಿಡಿದು ಪರಿಹಾರಕ್ಕಾಗಿ ಹೋರಾಟ ನಡೆಸಬೇಕು. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಟ್ಟು ಬಿಜೆಪಿ ಪರ ವಾತಾವರಣ ನಿರ್ಮಿಸಲು ಕಾರ್ಯಕರ್ತರು ಶ್ರಮಿಸಬೇಕು ಎಂದು ರಾಜೇಶ್ ನಾಯ್ಕ್ ಹೇಳಿದರು.
SIR ಕುರಿತು ಹೆಚ್ಚಿನ ಜಾಗೃತಿ ಅಗತ್ಯ
ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್ ಮಾತನಾಡಿ, SIR ಪ್ರಕ್ರಿಯೆಯು ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶ ಹೊಂದಿದ್ದು, ಯಾವುದೇ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಕಾರ್ಯಕರ್ತರು ಎಚ್ಚರಿಕೆ ವಹಿಸಬೇಕು ಎಂದರು. ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಅಗತ್ಯ ಆಕ್ಷೇಪಣೆ ಹಾಗೂ ತಿದ್ದುಪಡಿಗಳಿಗೆ ಅವಕಾಶ ಇರುವುದರಿಂದ ಪ್ರತಿಯೊಬ್ಬ ಕಾರ್ಯಕರ್ತರೂ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿ, ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವಂತೆ ಕರೆ ನೀಡಿದರು.
ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ ಸ್ವಾಗತಿಸಿ ಮಾತನಾಡಿ, SIR ಪ್ರಕ್ರಿಯೆಯಲ್ಲಿ ಸಾವಿರಾರು ಮತದಾರರ ಹೆಸರುಗಳ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಅರ್ಹ ಮತದಾರರ ಹಕ್ಕು ಕಾಪಾಡಲು ಪಕ್ಷದ ಕಾರ್ಯಕರ್ತರು ಹೆಚ್ಚಿನ ಜಾಗೃತಿಯಿಂದ ಕೆಲಸ ಮಾಡಬೇಕಾಗಿದೆ ಎಂದರು. ಪ್ರಕೃತಿ ವಿಕೋಪದಂತಹ ಸಂಕಷ್ಟದ ಸಂದರ್ಭಗಳಲ್ಲಿ ಜನರ ನಡುವೆ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದ ಅವರು, ಇಂತಹ ಸಂದರ್ಭಗಳಲ್ಲಿಯೂ ಕಾಂಗ್ರೆಸ್ ರಾಜಕೀಯ ಮಾಡಿಕೊಂಡು ಫೋಟೋಶೂಟ್ ಮಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ವಿಭಾಗ ಪ್ರಭಾರಿ ಭರತೇಶ್, ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಮಂಡಲ ಉಪಾಧ್ಯಕ್ಷ ರಾಕೇಶ್ ರೈ ಕಡೆಂಜಿ, ಮಾಜಿ ಶಾಸಕರಾದ ರುಕ್ಮಯ್ಯ ಪೂಜಾರಿ, ಪದ್ಮನಾಭ ಕೊಟ್ಟಾರಿ, ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಕಾರ್ಯದರ್ಶಿ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಶಿವಪ್ರಸಾದ್ ಶೆಟ್ಟಿ ಸೇರಿದಂತೆ ಮಂಡಲದ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಶಕ್ತಿಕೇಂದ್ರ ಹಾಗೂ ಮಹಾಶಕ್ತಿಕೇಂದ್ರ ಪ್ರಮುಖರು ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಹರೀಶ್ ಶೆಟ್ಟಿ ಪಡು ಕಾರ್ಯಕ್ರಮ ನಿರೂಪಿಸಿದರು. ಜಯಶ್ರೀ ಗೋಳ್ತಮಜಲು ಪ್ರಾರ್ಥಿಸಿದರು.











