Recent Posts

Thursday, August 13, 2026
ಸುದ್ದಿ

ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳ ವಿಜಯಪುರದಲ್ಲಿ ಬಂಧನ : ಬಾಗಲಕೋಟೆ ನಿವಾಸಿ ಅಲ್ತಾಫ್ ಹುಸೈನ್ ಬಂಧಿತ ಆರೋಪಿ- ಕಹಳೆ ನ್ಯೂಸ್

ಮಂಗಳೂರು: ಸರಗಳ್ಳತನ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿದ್ದಾಗ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ.

ಜಾಹೀರಾತು

ಜೂ.14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರಿಂದ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಜೂ. 26ರಂದು ನಗರದ ಪಾಂಡೇಶ್ವರದ ರೋಸಾರಿಯೋ ಶಾಲೆ ಸಮೀಪ ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬರುತ್ತಿದ್ದರು. ಈ ಸಂದರ್ಭದಲ್ಲಿ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ, ಅವರನ್ನು ತಳ್ಳಿ ಪೊಲೀಸರ ವಶದಿಂದ ಪರಾರಿಯಾಗಿದ್ದನು. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಗೆ ಸಣ್ಣ ಪ್ರಮಾಣದ ಗಾಯಗಳಾಗಿದ್ದು, ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳವು ಮಾಡಲಾಗಿದ್ದ ಬಂಗಾರದ ಸರ ಹಾಗೂ ಬೈಕ್‌ನ್ನು ಉತ್ತರ ಪ್ರದೇಶದ ನಿವಾಸಿಗಳಾದ ರವಿ ಬೌರಾ ಮತ್ತು ಮೊಹಮ್ಮದ್ ಸಾಹೀಲ್ ಸಿದ್ದೀಖಿ ಅಲಿಯಾಸ್ ಮೊಹಮ್ಮದ್ ಸಾಹಿಲ್ ಅವರಿಂದ ಪೊಲೀಸರು ಈಗಾಗಲೇ ವಶಪಡಿಸಿಕೊಂಡಿದ್ದರು.

ಪೊಲೀಸರ ವಶದಿಂದ ಪರಾರಿಯಾಗಿದ್ದ ಅಲ್ತಾಫ್ ಹುಸೈನ್‌ನ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿತ್ತು. ನಿರಂತರ ಕಾರ್ಯಾಚರಣೆ ನಡೆಸಿದ ತಂಡಕ್ಕೆ ಆರೋಪಿಯು ವಿಜಯಪುರದಲ್ಲಿರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಆ.10ರಂದು ವಿಜಯಪುರ ನಗರದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬೆನ್ನಟ್ಟಿ ಬಂಧಿಸಲಾಯಿತು.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಾರುತಿ ಪಿ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಲಕ್ಷ್ಮಣ ಸಾಲೋಟಗಿ, ಸಾಗರ್ ಹಾಗೂ ಆಂಜನೇಯ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಬಂಧಿತ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಅಲ್ತಾಫ್ ಹುಸೈನ್ ವಿರುದ್ಧ ರಾಜ್ಯದ ವಿವಿಧ ಭಾಗಗಳಲ್ಲಿ ಒಟ್ಟು 6 ಪ್ರಕರಣಗಳು ದಾಖಲಾಗಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.