
ಕೋಲ್ಕತ್ತಾ: ಹೋಟೆಲ್‌ವೊಂದರಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಗು ಸೇರಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಘಟನೆ ಕೋಲ್ಕತ್ತಾದಲ್ಲಿ ಮುಂಜಾನೆ ಸಂಭವಿಸಿದೆ.ನಗರದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಹೋಟೆಲ್‌ನಲ್ಲಿ ಮುಂಜಾನೆ ಸುಮಾರು 2 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಹೊತ್ತಿಕೊಂಡ ಪರಿಣಾಮ ಹೋಟೆಲ್‌ನೊಳಗಿದ್ದ ಹಲವು ಅತಿಥಿಗಳು ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಎ.ಸಿ ಸ್ಫೋಟಗೊಂಡ ಪರಿಣಾಮ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಆದರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.
ನ್ಯೂ ಮಾರ್ಕೆಟ್ ಸಮೀಪದ ಫ್ರೀ ಸ್ಕೂಲ್ ಸ್ಟ್ರೀಟ್‌ನಲ್ಲಿರುವ ಈ ಹೋಟೆಲ್ ನಗರದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾಗಿದೆ. ಹೀಗಾಗಿ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೆಂಕಿ ಕಾಣಿಸಿಕೊಂಡ ಕುರಿತು ಮಾಹಿತಿ ಲಭ್ಯವಾದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಜೊತೆಗೆ ವಿಪತ್ತು ನಿರ್ವಹಣಾ ತಂಡವೂ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.
ಹೋಟೆಲ್ ಕಟ್ಟಡದೊಳಗೆ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆ ಕರೆತರಲು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯಲ್ಲಿ ಮೃತಪಟ್ಟವರ ಗುರುತು ಹಾಗೂ ಅಗ್ನಿ ಅವಘಡದ ಸಂಪೂರ್ಣ ವಿವರಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೆಂಕಿಯಲ್ಲಿ ಸಾವನ್ನಪ್ಪಿದ ಎಲ್ಲಾ ಒಂಬತ್ತು ಜನರು ಬಾಂಗ್ಲಾದೇಶದ ಪ್ರಜೆಗಳಾಗಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ತೆರಳಿದ್ದರು ಎಂದು ವರದಿಯಾಗಿದೆ. ಬೆಂಕಿಗೆ ನಿಖರ ಕಾರಣ ತಿಳಿಯಲು ತನಿಖೆ ಮುಂದುವರಿದಿದೆ.










