ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪಾದಯಾತ್ರೆ ʻಕಹಳೆʼ : ʻಬಳ್ಳಾರಿ ಚಲೋʼಗೆ ಯಡಿಯೂರಪ್ಪ ಚಾಲನೆ! – ಕಹಳೆ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಗೆ ಅಧಿಕೃತ ಚಾಲನೆ ದೊರೆತಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಕಹಳೆ ಮೊಳಗಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು.
ಕಹಳೆ ಊದುವ ಮೂಲಕ ವಿಜಯೇಂದ್ರ (BY Vijayendra), ಆರ್.ಅಶೋಕ್, ಶ್ರೀರಾಮುಲು ಹಾಗೂ ಛಲವಾದಿ ನಾರಾಯಣಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರೈತಗೀತೆಯೊಂದಿಗೆ ಪಾದಯಾತ್ರೆಯ ವೇದಿಕೆ ಕಾರ್ಯಕ್ರಮ ಆರಂಭವಾಯಿತು.
ಸುಮಾರು 175 ಕಿ.ಮೀ. ಪಾದಯಾತ್ರೆ ಇದಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಆಕ್ರೋಶವನ್ನ ಹೊರಹಾಕಲು ಮುಂದಾಗಿದೆ. ಕಾರ್ಯಕ್ರಮ ವೇದಿಕೆಯಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಶ್ರೀರಾಮುಲು, ಜನಾರ್ದನ ರೆಡ್ಡಿ, ಛಲವಾದಿ ನಾರಾಯಣಸ್ವಾಮಿ, ಜಗದೀಶ್ ಶೆಟ್ಟರ್, ಸಿ.ಟಿ ರವಿ (CT Ravi) ಸೇರಿದಂತೆ ಹಲವು ಬಿಜೆಪಿ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.











