ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಮೊಬೈಲ್ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡ ಪೊಲೀಸರು – ಕಹಳೆ ನ್ಯೂಸ್

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್‌ಗಳನ್ನು ಬಳಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಪೊಲೀಸರು, ಸೆ.8ರ ರಾತ್ರಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ.
ತಪಾಸಣೆ ವೇಳೆ ಕಾರಾಗೃಹದ ಎ-ಬ್ಲಾಕ್‌ನಲ್ಲಿದ್ದ 9 ಕೈದಿಗಳಿಂದ ಅಕ್ರಮವಾಗಿ ಬಚ್ಚಿಟ್ಟಿದ್ದ 10 ಮೊಬೈಲ್ ಸ್ಮಾರ್ಟ್‌ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮೊಬೈಲ್‌ಗಳು ಪತ್ತೆಯಾದ ಕೈದಿಗಳನ್ನು ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್, ಅರ್ಷದ್, ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಹಾಗೂ ಅರ್ಫಜ್ ಎಂದು ಗುರುತಿಸಲಾಗಿದೆ.
ಪೊಲೀಸ್ ಮಾಹಿತಿಯಂತೆ, ಮೊದಲ ನಾಲ್ವರು ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. 5ರಿಂದ 8ನೇ ಕೈದಿಗಳು ಎನ್‌ಡಿಪಿಎಸ್ ಡ್ರಗ್ ಪೆಡ್ಲಿಂಗ್ ಪ್ರಕರಣಗಳ ಆರೋಪಿಗಳಾಗಿದ್ದು, 9ನೇ ಕೈದಿ ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾಗಿರುವ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ. ಕೈದಿಗಳು ಮೊಬೈಲ್‌ಗಳನ್ನು ಬಳಸುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಅ.ಕ್ರ. 82/2026, ಕಲಂ 323 ಬಿಎನ್‌ಎಸ್ ಹಾಗೂ ಕಲಂ 42 ಕರ್ನಾಟಕ ಕಾರಾಗೃಹ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವಶಪಡಿಸಿಕೊಂಡಿರುವ ಮೊಬೈಲ್‌ಗಳ ಬಳಕೆ ಹಾಗೂ ಅವುಗಳನ್ನು ಕಾರಾಗೃಹದೊಳಗೆ ಯಾರು ಪೂರೈಸಿದರು ಎಂಬುದರ ಕುರಿತು ಬರ್ಕೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.











