
ಬೆಳಗಾವಿ/ ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 18 ಮತ್ತು 19 ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ.
ಇತ್ತೀಚೆಗಷ್ಟೇ ಸಚಿವ ಸತೀಶ್ ಜಾರಕಿಹೊಳಿ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ನಡೆಸಿ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಅಮಿತ್ ಶಾ ಅವರ ಈ ಭೇಟಿ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಸೆ. 19 ಸಂಜೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮಕ್ಕೆ ಭೇಟಿ ನೀಡಲಿರುವ ಅವರು ಶಾಸಕಿ ಶಶಿಕಲಾ ಜೊಲ್ಲೆ ಹಾಗೂ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಒಡೆತನದ ‘ಬೀರೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ’ಯ ನೂತನ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.
ರಾಜಕೀಯ ಮಹತ್ವ ಪಡೆದ ಭೇಟಿ
ಸಚಿವ ಸತೀಶ್ ಜಾರಕಿಹೊಳಿ ಅವರ ತವರು ಜಿಲ್ಲೆಯಾದ ಬೆಳಗಾವಿಗೆ ಅಮಿತ್ ಶಾ ಆಗಮಿಸುತ್ತಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಜಾರಕಿಹೊಳಿ ಸಹೋದರರು ಮತ್ತು ಜೊಲ್ಲೆ ಕುಟುಂಬ ಒಂದಾಗಿ ಚುನಾವಣೆ ಎದುರಿಸಿದ್ದು, ಜಾರಕಿಹೊಳಿ ಬ್ರದರ್ಸ್ ಬೆಂಬಲದಿಂದಲೇ ಅಣ್ಣಾಸಾಹೇಬ್ ಜೊಲ್ಲೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿದ್ದರು.
ಇದೀಗ ಸತೀಶ್ ಜಾರಕಿಹೊಳಿ ವಿರುದ್ಧ ಇ.ಡಿ ತನಿಖೆಯ ಬಿಸಿ ಹೆಚ್ಚಿರುವಾಗಲೇ ಅಮಿತ್ ಶಾ ಚಿಕ್ಕೋಡಿಗೆ ಆಗಮಿಸುತ್ತಿರುವುದು ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಹೊರಹೊಮ್ಮಿದೆ. ಅಮಿತ್ ಶಾ ಅವರ ಆಗಮನದ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಹುಬ್ಬಳ್ಳಿಯಲ್ಲಿ ಬೀಡುಬಿಡಲಿದ್ದಾರೆ.











