ಚುನಾವಣಾ ಆಯೋಗದ ವಿರುದ್ಧ ಮಂಗಳೂರಿನಲ್ಲಿ ಜಿಲ್ಲಾ ಕಾಂಗ್ರೆಸ್ ಬೃಹತ್ ಪ್ರತಿಭಟನಾ ಮೆರವಣಿಗೆ – ಕಹಳೆ ನ್ಯೂಸ್

ಮಂಗಳೂರು : ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಚುನಾವಣಾ ಆಯೋಗವು ಪಕ್ಷಪಾತ ಧೋರಣೆ ತೋರುತ್ತಿದ್ದು, ಅದರ ವಿಶ್ವಾಸಾರ್ಹತೆ ಗಂಭೀರ ಪ್ರಶ್ನೆಗೆ ಒಳಗಾಗಿದೆ. ಆಯೋಗದ ಅಕ್ರಮಗಳು ಹಾಗೂ ತಾರತಮ್ಯ ನೀತಿಯನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಸೋಮವಾರ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್ ಪೂಜಾರಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರ ಬೆಳಗ್ಗೆ 10:30ಕ್ಕೆ ಮಂಗಳೂರಿನ ಮಹಾವೀರ (ಪಂಪ್‌ವೆಲ್) ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ಜಿಲ್ಲಾಧಿಕಾರಿ ಕಚೇರಿವರೆಗೆ ಸಾಗಲಿದೆ. ಬಳಿಕ ಅಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಬ್ಲಾಕ್ ಅಧ್ಯಕ್ಷರು, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಸಂವಿಧಾನದಲ್ಲಿ ನಂಬಿಕೆಯುಳ್ಳ ಸಾರ್ವಜನಿಕರು ಈ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ತಕ್ಷಣವೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಕೇಂದ್ರ ಸರ್ಕಾರ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಬಂಧಿಸಿ ತನಿಖೆಗೊಳಪಡಿಸಬೇಕು ಎಂದು ಆಗ್ರಹಿಸಿದರು.
ಆಯೋಗದ ಮೇಲಿನ ಆರೋಪ: ಆಯೋಗದ ಇಬ್ಬರು ಸಹ ಆಯುಕ್ತರಾದ ಡಾ. ಸುಖ್‌ಬೀರ್ ಸಿಂಗ್ ಸಂಧು ಹಾಗೂ ಡಾ. ವಿವೇಕ್ ಜೋಶಿ ಅವರು ಮುಖ್ಯ ಚುನಾವಣಾ ಆಯುಕ್ತರ ನಿರ್ಧಾರಗಳ ವಿರುದ್ಧ 14 ಬಾರಿ ಆಕ್ಷೇಪಣೆ ಸಲ್ಲಿಸಿದ್ದರೂ, ಅದನ್ನು ನಿರ್ಲಕ್ಷಿಸಿ ಏಕಪಕ್ಷೀಯವಾಗಿ ಕಾರ್ಯಾಚರಿಸಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎತ್ತಿದ್ದ ‘ಮತ ಕಳವು’ ಆರೋಪ ಹಾಗೂ ಮಹಾರಾಷ್ಟ್ರ ಮತ್ತು ಕರ್ನಾಟಕದ ಮಹದೇವಪುರ ಕ್ಷೇತ್ರದಲ್ಲಿ ನಡೆದ ಅಕ್ರಮಗಳು ಈಗ ಸತ್ಯವೆಂದು ಸಾಬೀತಾಗುತ್ತಿವೆ ಎಂದು ಪದ್ಮರಾಜ್ ದೂರಿದರು.










