
ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B Y Vijayendra) ಅವರು ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಪ್ರಸಿದ್ಧ ಕುರುಡುಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಜೀವನದ 25 ವರ್ಷಗಳ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ ಹಾಗೂ ‘ಬೂತ್ ವಿಜಯ ಸಂಕಲ್ಪ ಯಾತ್ರೆ’ಯ ಭಾಗವಾಗಿ ವಿಜಯೇಂದ್ರ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಅ.1ರಿಂದ ಆರಂಭವಾಗಿರುವ ಈ ಅಭಿಯಾನದಲ್ಲಿ ಮೊದಲ ಹಂತದಲ್ಲಿ ಹಲವು ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಭಾಗವಹಿಸುವ ಕಾರ್ಯಕ್ರಮವಿದೆ.
ಕುರುಡುಮಲೆ ವಿನಾಯಕನ ಸನ್ನಿಧಿಯಲ್ಲಿ ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿ ಸಂಕಲ್ಪ ಮಾಡಿದ್ದಾರೆ. ಬಳಿಕ ಕೋಲಾರ ಜಿಲ್ಲೆಯ ಬಂಗಾರಪೇಟೆ ಹಾಗೂ ಕೆ.ಜಿ.ಎಫ್ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಂಡು ಸಂಘಟನಾ ಸಭೆಗಳಲ್ಲಿ ಭಾಗವಹಿಸಿದ್ದಾರೆ.










