
ಗದಗ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡವರು, ಯುವಕರು, ಅನ್ನದಾತರು ಹಾಗೂ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ನಡೆದ ವಿಕಸಿತ ಭಾರತ ಸಂಕಲ್ಪ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಅವಕಾಶ, ಶಿಕ್ಷಣ ಹಾಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು ಎಂಬ ಆಶಯದೊಂದಿಗೆ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದರು.
ಗ್ರಾಮೀಣ ಭಾಗಕ್ಕೆ ವಿದ್ಯುತ್ ಸಂಪರ್ಕ, ಶೌಚಾಲಯ, ಮೂಲಸೌಕರ್ಯ ಸೇರಿದಂತೆ ಜನರ ಜೀವನಮಟ್ಟ ಸುಧಾರಿಸುವ ಹಲವು ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಕೋವಿಡ್ ಮಹಾಮಾರಿ, ರಷ್ಯಾ–ಉಕ್ರೇನ್ ಯುದ್ಧ ಸೇರಿದಂತೆ ಜಾಗತಿಕ ಸವಾಲುಗಳ ನಡುವೆಯೂ ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿಸುವ ನಿಟ್ಟಿನಲ್ಲಿ ರಕ್ಷಣಾ, ವಿದ್ಯುತ್, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಮಹತ್ವದ ಬದಲಾವಣೆಗಳಾಗುತ್ತಿವೆ. ಮೇಕ್ ಇನ್ ಇಂಡಿಯಾ, ಸ್ಟಾರ್ಟಪ್ ಇಂಡಿಯಾ ಹಾಗೂ ಸ್ಕಿಲ್ ಇಂಡಿಯಾ ಯೋಜನೆಗಳ ಮೂಲಕ ಯುವಶಕ್ತಿಗೆ ಹೊಸ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ ಎಂದರು.
‘ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ, ಸಬ್ಕಾ ಪ್ರಯಾಸ್’ ಎಂಬ ಆಶಯದೊಂದಿಗೆ ಜಾತಿ, ಧರ್ಮದ ಭೇದವಿಲ್ಲದೆ ಎಲ್ಲ ವರ್ಗದ ಜನರನ್ನು ಅಭಿವೃದ್ಧಿಯ ಮುಖ್ಯವಾಹಿನಿಗೆ ತರುವ ಸಂಕಲ್ಪವನ್ನು ಕೇಂದ್ರ ಸರ್ಕಾರ ಹೊಂದಿದೆ. ಯುವಜನತೆಯ ಶಕ್ತಿಯ ಮೇಲೆ ವಿಶ್ವಾಸವಿಟ್ಟು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ವಿಜಯೇಂದ್ರ ಹೇಳಿದರು.
ಸಭೆಯಲ್ಲಿ ಶಾಸಕ ಸಿ.ಸಿ. ಪಾಟೀಲ, ಶಾಸಕ ಡಾ. ಚಂದ್ರು ಲಮಾಣಿ, ಬಿಜೆಪಿ ಮುಖಂಡ ಅನೀಲ ಮೆಣಸಿನಕಾಯಿ, ಜಿಲ್ಲಾಧ್ಯಕ್ಷ ರಾಜು ಕುರುಡಗಿ, ಲಿಂಗರಾಜ ಪಾಟೀಲ, ಆರ್.ಕೆ. ಚವ್ಹಾಣ, ಪಕ್ಕಿರೇಶ ರಟ್ಟಿಹಳ್ಳಿ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.











