ನಾಳೆ ಪ್ರಧಾನಿ ಮೋದಿಯಿಂದ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ಉದ್ಘಾಟನೆ : ಹಲವು ರೈಲ್ವೆ ಯೋಜನೆಗಳು ಲೋಕಾರ್ಪಣೆ – ಕಹಳೆ ನ್ಯೂಸ್

ಬೆಂಗಳೂರು : ಕರ್ನಾಟಕದ ರೈಲ್ವೆ ಮೂಲಸೌಕರ್ಯ ಮತ್ತು ಪ್ರಯಾಣಿಕರ ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ನಾಳೆ (ನವೆಂಬರ್ 13, 2026) ಮಹತ್ವದ ಮೈಲಿಗಲ್ಲು ಸ್ಥಾಪನೆಯಾಗಲಿದೆ. ಮಧ್ಯಾಹ್ನ 12.00 ಗಂಟೆಗೆ ಬೆಂಗಳೂರಿನ ಐಐಎಂ ಸಭಾಂಗಣದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಹುನಿರೀಕ್ಷಿತ ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.
ಇದರೊಂದಿಗೆ ರಾಜ್ಯದ ವಿವಿಧ ರೈಲ್ವೆ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿಗಳು ದೇಶಕ್ಕೆ ಸಮರ್ಪಿಸಲಿದ್ದಾರೆ.
ಮಂಗಳೂರು ಜಂಕ್ಷನ್ನಲ್ಲಿ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಭಾಗಿ ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಕೇಂದ್ರ ರೈಲ್ವೆ, ಮಾಹಿತಿ ಮತ್ತು ಪ್ರಸಾರ ಹಾಗೂ ಎಲೆಕ್ಟ್ರಾನಿಕ್ಸ್ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಮಂಗಳೂರು ಜಂಕ್ಷನ್ನಲ್ಲಿ ಖುದ್ದಾಗಿ ಹಾಜರಿದ್ದು, ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಸಂಚಾರಕ್ಕೆ ಹಸಿರು ನಿಶಾನೆ ತೋರಲಿದ್ದಾರೆ.
ಅಮೃತ್ ಭಾರತ್ ಯೋಜನೆಯಡಿ 4 ನಿಲ್ದಾಣಗಳ ಪುನರಾಭಿವೃದ್ಧಿ ಲೋಕಾರ್ಪಣೆ ವಂದೇ ಭಾರತ್ ರೈಲಿನ ಜೊತೆಗೆ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ಆಧುನೀಕರಣಗೊಂಡಿರುವ ನಾಲ್ಕು ಪ್ರಮುಖ ರೈಲು ನಿಲ್ದಾಣಗಳು ಉದ್ಘಾಟನೆಗೊಳ್ಳಲಿವೆ. ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಚಿಕ್ಕಮಗಳೂರು ಮತ್ತು ಚಾಮರಾಜನಗರ ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಕಾಮಗಾರಿಗಳು ಹಾಗೂ ಸಕಲೇಶಪುರ-ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದ ವಿದ್ಯುದೀಕರಣ ಯೋಜನೆಯನ್ನು ಈ ಸಂದರ್ಭದಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಾಗುವುದು.
ರಾಜ್ಯದ ವಿವಿಧೆಡೆ ಏಕಕಾಲಕ್ಕೆ ವಿಶೇಷ ಕಾರ್ಯಕ್ರಮಗಳು ಉದ್ಘಾಟನೆಯ ಅಂಗವಾಗಿ ನಾಳೆ ಮಧ್ಯಾಹ್ನ 12:00 ಗಂಟೆಗೆ ರಾಜ್ಯದ ವಿವಿಧ ರೈಲು ನಿಲ್ದಾಣಗಳಲ್ಲಿ ಏಕಕಾಲದಲ್ಲಿ ಸಮಾರಂಭಗಳು ನಡೆಯಲಿವೆ. ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನಡೆಯುವುದರ ಜೊತೆಗೆ ವಂದೇ ಭಾರತ್ ರೈಲಿಗೆ ಸ್ವಾಗತ ಕೋರಿ ಹಸಿರು ನಿಶಾನೆ ತೋರಲಾಗುವುದು. ಅದೇ ರೀತಿ ಚಾಮರಾಜನಗರ ಮತ್ತು ಚಿಕ್ಕಮಗಳೂರು ನಿಲ್ದಾಣಗಳ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆಗೊಳ್ಳಲಿದ್ದು, ಕಬಕ ಪುತ್ತೂರು ಹಾಗೂ ಹಾಸನ ರೈಲು ನಿಲ್ದಾಣಗಳಲ್ಲಿಯೂ ರೈಲಿಗೆ ಹಸಿರು ನಿಶಾನೆ ತೋರಿಸುವ ಕಾರ್ಯಕ್ರಮಗಳು ನೆರವೇರಲಿವೆ.
ವೇಗದ ಪ್ರಯಾಣದೊಂದಿಗೆ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಬೆಂಗಳೂರು, ಕರಾವಳಿ ಮತ್ತು ಗೋವಾವನ್ನು ಸಂಪರ್ಕಿಸುವ ಈ ನೂತನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಪ್ರಯಾಣಿಕರಿಗೆ ಅತ್ಯಾಧುನಿಕ, ವೇಗದ ಮತ್ತು ಸುರಕ್ಷಿತ ಪ್ರಯಾಣದ ಅನುಭವ ನೀಡಲಿದೆ. ಮಾರ್ಗಗಳ ವಿದ್ಯುದೀಕರಣ ಮತ್ತು ನಿಲ್ದಾಣಗಳ ಮೇಲ್ದರ್ಜೆಗೇರಿಸುವಿಕೆಯಿಂದ ಕಾರ್ಯಾಚರಣೆಯ ದಕ್ಷತೆ ಹೆಚ್ಚಲಿದ್ದು, ಕರ್ನಾಟಕದ ಸಾರಿಗೆ, ವಾಣಿಜ್ಯ ಹಾಗೂ ಪ್ರವಾಸೋದ್ಯಮ ಕ್ಷೇತ್ರಕ್ಕೆ ದೊಡ್ಡ ಉತ್ತೇಜನ ಸಿಗಲಿದೆ ಎಂದು ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಹಾಗೂ ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ತಿಳಿಸಿದ್ದಾರೆ.











