Recent Posts

Sunday, November 22, 2026
ಸುದ್ದಿ

ಆಕ್ಷೇಪಾರ್ಹ ಹೇಳಿಕೆ: ಮೂವರಿಗೆ ರಿಲೀಫ್ ನೀಡಿ ಪ್ರತಾಪ್ ಸಿಂಹಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್-ಕಹಳೆ ನ್ಯೂಸ್

ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟುಮಾಡುವಂತಹ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ತೀವ್ರ ಹಿನ್ನಡೆಯಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಾಗೂ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಅನಂತ್ ರಾಮನಾಥ ಹೆಗ್ಡೆ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿ ಆದೇಶಿಸಿದೆ.

ಜಾಹೀರಾತು

ಇದೇ ಪ್ರಕರಣದಲ್ಲಿ ಭಾಗಿಯಾಗಿದ್ದ ಇನ್ನುಳಿದ ಮೂವರು ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಅವರ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿದೆ. ವಿವಾದಾತ್ಮಕ ಹೇಳಿಕೆ ನೀಡುವಂತೆ ಪ್ರತಾಪ್ ಸಿಂಹ ಅವರಿಗೆ ಕಾರ್ಯಕ್ರಮದ ಆಯೋಜಕರು ಪ್ರಚೋದನೆ ನೀಡಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ನ್ಯಾಯಪೀಠ ಈ ವೇಳೆ ಸ್ಪಷ್ಟಪಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು, ದೂರಿನಲ್ಲಿರುವ ಅಂಶಗಳು ಮತ್ತು ಪ್ರತಾಪ್ ಸಿಂಹ ಅವರ ಭಾಷಣದ ನಿರ್ದಿಷ್ಟ ಭಾಗಗಳನ್ನು ಗಮನಿಸಿದರೆ, ಅದು ಗಲಭೆಯನ್ನು ಪ್ರಚೋದಿಸುವ ಹಾಗೂ ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ಹೇಳಿದೆ.

2024ರ ಸೆಪ್ಟೆಂಬರ್ 21ರಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಗಣೇಶ ವಿಸರ್ಜನೆಯ ದಿನದಂದು ನಡೆದ ಕಾರ್ಯಕ್ರಮದಲ್ಲಿ ಪ್ರತಾಪ್ ಸಿಂಹ ಮುಖ್ಯ ಅತಿಥಿಯಾಗಿ ಭಾಗವಹಿಸಿ ಭಾಷಣ ಮಾಡಿದ್ದರು. ಈ ವೇಳೆ ಅವರು, ಹಿಂದೂ ಧಾರ್ಮಿಕ ಮೆರವಣಿಗೆಗಳ ಮೇಲೆ ಏಕೆ ಕಲ್ಲು ತೂರಲಾಗುತ್ತದೆ, ಈದ್ ಮಿಲಾದ್ ಮೆರವಣಿಗೆಗಳ ಸಂದರ್ಭದಲ್ಲಿ ಹಿಂದೂಗಳು ಕಲ್ಲು ತೂರಿರುವ ಒಂದಾದರೂ ನಿದರ್ಶನವನ್ನು ತೋರಿಸಿ ಎಂದು ಪ್ರಶ್ನಿಸಿದ್ದರು. ಅಲ್ಲದೆ, ದೇಶದ ಜನಸಂಖ್ಯೆಯಲ್ಲಿ ಶೇಕಡಾ 80ರಷ್ಟು ಹಿಂದೂಗಳೇ ಇದ್ದು, ಒಂದು ವೇಳೆ ಅವರೂ ಕೈಗೆ ಕಲ್ಲುಗಳನ್ನು ಎತ್ತಿಕೊಂಡರೆ ಏನಾಗಬಹುದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಹೇಳಿಕೆ ನೀಡಿದ ಆರೋಪದ ಮೇಲೆ ಭಾರತೀಯ ನ್ಯಾಯ ಸಂಹಿತೆ-2023ರ (BNS) ಕಲಂ 299 ಮತ್ತು 192ರ ಅಡಿಯಲ್ಲಿ ಪ್ರತಾಪ್ ಸಿಂಹ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.