
ಪುತ್ತೂರು: ವಿದ್ಯಾರ್ಥಿಗಳು ತರಗತಿಗಳಲ್ಲಿ ಗಳಿಸಿದ ಜ್ಞಾನವನ್ನು ಭವಿಷ್ಯದಲ್ಲಿ ಪ್ರಾಯೋಗಿಕವಾಗಿ ಅಳವಡಿಸಿಕೊಂಡು ಜೀವನ ನಡೆಸಬೇಕು. ಆಧುನಿಕ ಸ್ಪರ್ಧಾತ್ಮಕ ಜಗತ್ತಿನಲ್ಲಿ ಕೌಶಲ್ಯಯುತ ವಿದ್ಯಾರ್ಥಿಗಳಿಗೆ ವೃತ್ತಿ ಬದುಕಿನಲ್ಲಿ ಹೆಚ್ಚಿನ ಅವಕಾಶಗಳಿವೆ ಎಂದು ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ವಂ. ಡಾ.ಆ್ಯಂಟನಿ ಪ್ರಕಾಶ್ ಮೊಂತೆರೊ ಹೇಳಿದರು.
ಸಂತ ಫಿಲೋಮಿನಾ ಕಾಲೇಜಿನ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿದಾಯಕೂಟದಲ್ಲಿ ಭಾಗವಹಿಸಿ, ಮಾತನಾಡಿದರು. ವಿದ್ಯಾರ್ಥಿಗಳು ತಾವು ಶಿಕ್ಷಣ ಪಡೆದ ಸಂಸ್ಥೆಗೆ ಸದಾ ಚಿರಋಣಿಗಳಾಗಿರಬೇಕು. ಸಂಸ್ಥೆಯ ಕುರಿತು ಅಭಿಮಾನದ ಮಾತುಗಳನ್ನಾಡುವ ಹೃದಯ ಶ್ರೀಮಂತಿಕೆಯನ್ನು ಹೊಂದಿರಬೇಕು ಎಂದರು.
ಸಮಾಜಕಾರ್ಯ ವಿಭಾಗದ ಸಂಯೋಜಕಿ ಶ್ರೀಮಣಿ ಮಾತನಾಡಿ, ಉನ್ನತ ಇತಿಹಾಸವಿರುವ ಈ ಸಂಸ್ಥೆಯಲ್ಲಿ ಅಧ್ಯಯನಗೈದ ವಿದ್ಯಾರ್ಥಿಗಳು ಸಮಾಜದ ವಿವಿಧ ಸ್ತರಗಳಲ್ಲಿ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದಾರೆ. ಪ್ರಸ್ತುತ ಎರಡು ವರ್ಷಗಳ ಅಧ್ಯಯನವನ್ನು ಪೂರೈಸಿ, ನಿರ್ಗಮನದ ಅಂಚಿನಲ್ಲಿರುವ ವಿದ್ಯಾರ್ಥಿಗಳು ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ಸದವಕಾಶ ಒದಗಿ ಬರಲಿ ಎಂದು ಹಾರೈಸಿದರು. ಅಂತಿಮ ವರ್ಷದ ವಿದ್ಯಾರ್ಥಿಗಳ ವತಿಯಿಂದ ಸುಹಾಗ್, ಮಹೇಶ್ ಮತ್ತು ವಿಜಯಲಕ್ಷ್ಮೀ ಎರಡು ವರ್ಷಗಳ ಸ್ನಾತಕೋತ್ತರ ವಿದ್ಯಾರ್ಥಿ ಜೀವನದಲ್ಲಿ ತಮಗಾದ ಶೈಕ್ಷಣಿಕ ಅನುಭವವನ್ನು ಹಂಚಿಕೊಂಡು ಕೃತಜ್ಞತೆ ಸಲ್ಲಿಸಿದರು.
ಅಲ್ಲದೆ ಇದೇ ಸಂದರ್ಭದಲ್ಲಿ ಮುಂದಿನ ವಿದ್ಯಾರ್ಥಿಗಳ ಅಧ್ಯಯನಕ್ಕೆ ಪೂರಕವಾಗಿ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಿದರು. ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ರೀತಿಯ ಕ್ರಿಯಾತ್ಮಕ ಚಟುವಟಿಕೆಗಳನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರತಿಭಾ, ಶೀತಲ್ ಕುಮಾರ್, ಸಚಿನ್ ಕುಮಾರ್ ಮತ್ತು ದೀಪಿಕಾ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ದೀಕ್ಷಿತಾ ಪ್ರಾರ್ಥಿಸಿದರು. ಜಾಫರ್ ಸ್ವಾಗತಿಸಿ, ಪೂಜಾಶ್ರೀ ವಂದಿಸಿದರು. ಮುಕಾಂಬಿಕಾ ಕಾರ್ಯಕ್ರಮ ನಿರೂಪಿಸಿದರು.














