
ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿದಂತೆ ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಪರಿಹರಿಸಿಕೊಳ್ಳೋಣ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.
ಈ ಬಗ್ಗೆ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪತ್ರದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಇರುವ ಎಲ್ಲಾ ಬಗೆಯ ವಿವಾದಗಳು, ಭಿನ್ನಾಭಿಪ್ರಾಯಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳೋಣ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಈ ಕುರಿತು ಪಾಕಿಸ್ತಾನದ ಪತ್ರಿಕೆಗಳೂ ಕೂಡ ವರದಿ ಮಾಡಿದ್ದು, ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮೂಡುವಂತೆ ಮಾಡಲು ಪಾಕ್ ಬದ್ಧವಾಗಿದೆ. ಆದ್ದರಿಂದ ಈ ವಿಷಯವಾಗಿ ಉಭಯ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಅಂತೆಯೇ ಮತ್ತೊಮ್ಮೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಅವರನ್ನು ಪತ್ರದಲ್ಲಿ ಮತ್ತೊಮ್ಮೆ ಅಭಿನಂಧಿಸಿರುವ ಇಮ್ರಾನ್ ಖಾನ್, ಕಾಶ್ಮೀರ ಸೇರಿ ಎಲ್ಲ ವಿವಾದಗಳನ್ನು ಪರಿಹರಿಸಿಕೊಳ್ಳಲು ಪಾಕ್ ಉತ್ಸುಕವಾಗಿದೆ ಎಂದು ಹೇಳಿದ್ದಾರೆ.








